ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸುವ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಭಿನಂದನೆ ಸಲ್ಲಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ನಿರ್ಧಾರ ಪ್ರಕಟಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಅಕಾಡೆಮಿ ಪರವಾಗಿ ಅವರು ಧನ್ಯವಾದ ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮೂಲಕ ನುಡಿದಂತೆ ನಡೆದಿದೆ ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಸಂತಸ ವ್ಯಕ್ತಪಡಿಸಿದ್ದಾರೆ.
ಸಮಸ್ತ ತುಳುವರಿಗೆ ಇದೊಂದು ಚಾರಿತ್ರಿಕ ದಿನವಾಗಿದ್ದು, ಜಗತ್ತಿನಾದ್ಯಂತ ನೆಲೆಸಿರುವ ತುಳು ಭಾಷಿಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಮಹತ್ವದ ಬೆಳವಣಿಗೆಯಾಗಿದೆ. ಸುಮಾರು ಮೂರು ಸಾವಿರ ವರ್ಷಗಳ ಚಾರಿತ್ರಿಕ ಹಿನ್ನೆಲೆ ಹೊಂದಿರುವ ತುಳು ಭಾಷೆಯ ಸಮಗ್ರ ಬೆಳವಣಿಗೆಗೆ ಸರ್ಕಾರದ ಈ ನಿರ್ಧಾರ ಮಹತ್ವದ ಕೊಡುಗೆಯಾಗಿದೆ ಎಂದು ಅವರು ಹೇಳಿದ್ದಾರೆ.
ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆಯುವ ನಿಟ್ಟಿನಲ್ಲಿ ಕಾಳಜಿ ವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಮುಂದೆ ನಿರಂತರವಾಗಿ ವಿಷಯ ಮಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ರೈ ಸೇರಿದಂತೆ ಕರಾವಳಿಯ ಎಲ್ಲ ಶಾಸಕರಿಗೂ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಅದೇ ರೀತಿ ಸರ್ಕಾರದ ಮೇಲೆ ನಿರಂತರವಾಗಿ ಒತ್ತಾಯ ಹಾಗೂ ಆಗ್ರಹಗಳನ್ನು ತಂದ ದೇಶ-ವಿದೇಶಗಳ ತುಳು ಸಂಘ-ಸಂಸ್ಥೆಗಳಿಗೂ ತಾರಾನಾಥ ಗಟ್ಟಿ ಕಾಪಿಕಾಡ್ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ್ದ ವರದಿಯ ಬಳಿಕ, ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಆಂಧ್ರ ಪ್ರದೇಶ ಅಧ್ಯಯನ ವರದಿಯ ಹಿನ್ನೆಲೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಕುರಿತು ಮಹತ್ವದ ಪ್ರಕ್ರಿಯೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರ ನೇಮಿಸಿದ್ದ ಆಂಧ್ರ ಪ್ರದೇಶ ಅಧ್ಯಯನ ಸಮಿತಿಯ ಸದಸ್ಯನಾಗಿ, ಆಂಧ್ರ ಪ್ರದೇಶದಲ್ಲಿ ಉರ್ದು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವ ಸಂದರ್ಭದಲ್ಲಿ ಅನುಸರಿಸಿದ ವಿಧಿ ವಿಧಾನಗಳು ಹಾಗೂ ಕಾನೂನು ಪ್ರಕ್ರಿಯೆಗಳ ಕುರಿತು ಮಾಹಿತಿಯನ್ನು ವರದಿ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸುವ ಅವಕಾಶ ತಮಗೆ ದೊರೆತಿತ್ತು ಎಂದು ಅವರು ಹೇಳಿದ್ದಾರೆ.
ಆಂಧ್ರ ಪ್ರದೇಶ ಅಧ್ಯಯನ ವರದಿಯು ತುಳುವನ್ನು ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರಕ್ಕೆ ಮಹತ್ವದ ದಾಖಲೆಗಳು ಹಾಗೂ ನಿರೂಪಣೆಗಳನ್ನು ಒದಗಿಸಿಕೊಟ್ಟಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆಯಾಗಬೇಕು ಎಂಬುದು ತುಳುವರ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಇಂದಿನ ನಿರ್ಧಾರವು ಪೂರಕ ಬಲವನ್ನು ನೀಡಿದ್ದು, ಮುಂದಿನ ಹೋರಾಟಕ್ಕೆ ಮಹತ್ವದ ಹೆಜ್ಜೆಯಾಗಿದೆ ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ.
Post a Comment