ಉಪ್ಪಿನಂಗಡಿ: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದಿರುವ ಆರೋಪದ ದಾರುಣ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೇರ್ನೆಯಲ್ಲಿ ಸೆಪ್ಟೆಂಬರ್ 19ರಂದು ಮಧ್ಯಾಹ್ನ ನಡೆದಿದೆ.
ಪೇರ್ನೆ ನಿವಾಸಿ ಸಿನಾನ್ (32) ಹಾಗೂ ಅವರ ಪತ್ನಿ ನೂರುನ್ನಿಸಾ (28) ನಡುವೆ ಫೋನ್‌ನಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೋಪಗೊಂಡ ನೂರುನ್ನಿಸಾ ಮನೆಯಲ್ಲಿದ್ದ ತನ್ನ 3.5 ವರ್ಷದ ಮಗುವಿನೊಂದಿಗೆ ಪತಿಯ ತಂಗಿಯ 3 ವರ್ಷದ ಮಗುವನ್ನೂ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಬಾವಿಗೆ ಇಳಿದು ಎರಡೂ ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ, ಪತಿಯ ತಂಗಿಯ 3 ವರ್ಷದ ಮಗು ಮೃತಪಟ್ಟಿರುವುದು ದೃಢಪಟ್ಟಿದೆ. ನೂರುನ್ನಿಸಾಳ ಮಗುವನ್ನು ತುರ್ತಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರಂ 121/2026ರಂತೆ ಪ್ರಕರಣ ದಾಖಲಾಗಿದೆ. ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಇತರ ವಿವರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Post a Comment