ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ: ಅ.12ರಂದು ಸಿಎಂ ಡಿ.ಕೆ. ಶಿವಕುಮಾರ್‌ರಿಂದ ಚಾಲನೆ, ಅ.21ರಂದು ವೈಭವದ ಶೋಭಾಯಾತ್ರೆ


ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಅಕ್ಟೋಬರ್ 11ರಿಂದ 22ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವೈಭವದಿಂದ ನಡೆಯಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಉತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ.

ಅ.11ರಂದು ವೈದಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನಡೆಯಲಿದೆ. ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ನೀಡಲಿದ್ದಾರೆ. ಅ.21ರಂದು ಸಂಜೆ 4 ಗಂಟೆಗೆ ಐತಿಹಾಸಿಕ ಮಂಗಳೂರು ದಸರಾ ಶೋಭಾಯಾತ್ರೆ ನಡೆಯಲಿದೆ.

ಉತ್ಸವದ ಅಂಗವಾಗಿ ಅ.12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ ಚಂಡಿಕಾಹೋಮ ನಡೆಯಲಿದ್ದು, ಅ.17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ಆಯೋಜಿಸಲಾಗಿದೆ. ಸಂತೋಷಿ ಕಲಾಮಂಟಪದಲ್ಲಿ ಅ.11ರಿಂದ 20ರವರೆಗೆ ‘ದಸರಾ ಕಲಾಝೇಂಕಾರ’ ಹೆಸರಿನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇದರೊಂದಿಗೆ ರಾಜ್ಯಮಟ್ಟದ ಕವಿಗೋಷ್ಠಿ, ಕಥೆ-ಕವನ ಸ್ಪರ್ಧೆ, ‘ರುದ್ರತಾಂಡವಮ್’, ಮಕ್ಕಳ ದಸರಾ, ‘ಮುದ್ದು ಶಾರದೆ’, ದಸರಾ ಮ್ಯಾರಥಾನ್, ‘ಮಹಿಳಾ ದಸರಾ’ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಅ.20ರಂದು ಶಾರದಾ ಮಾತೆಯ ಮಡಿಲಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವೂ ಆಯೋಜಿಸಲಾಗಿದೆ.

ಈ ಬಾರಿ ದರ್ಬಾರ್ ಮಂಟಪವನ್ನು ಅರಮನೆ ಶೈಲಿಯಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯ ಮೂರ್ತಿಗಳ ಪ್ರತಿಷ್ಠಾಪನೆ ಪ್ರಮುಖ ಆಕರ್ಷಣೆಯಾಗಲಿದೆ.

Post a Comment

Previous Post Next Post