ಮಂಗಳೂರು, ಅ.2: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಸರಳ ಜೀವನ ಮತ್ತು ಉನ್ನತ ಚಿಂತನೆಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸರಳ ಜೀವನದ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸುವ ಹೋರಾಟದ ಜೊತೆಗೆ ಬಡತನ ಮತ್ತು ಅಸ್ಪೃಶ್ಯತೆ ವಿರುದ್ಧವೂ ಗಾಂಧೀಜಿ ಹೋರಾಡಿದ್ದರು. ಲಾಲ್ಬಹದ್ದೂರ್ ಶಾಸ್ತ್ರಿ ಅವರು ದೇಶ ಕಂಡ ಪ್ರಾಮಾಣಿಕ ಪ್ರಧಾನಿಯಾಗಿದ್ದು, ಅವರ ಸರಳತೆ ಮತ್ತು ವ್ಯಕ್ತಿತ್ವ ಎಲ್ಲರಿಗೂ ಆದರ್ಶವಾಗಿದೆ ಎಂದು ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಸ್ವಚ್ಛತೆಯ ಸಂಕಲ್ಪ ಹಾಗೂ ಶಾಸ್ತ್ರಿಯವರ ಪ್ರಾಮಾಣಿಕತೆ, ಸರಳತೆ ಮತ್ತು ಕರ್ತವ್ಯನಿಷ್ಠೆಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು. ‘ಅಧಿಕಾರಕ್ಕಿಂತ ಕರ್ತವ್ಯ ದೊಡ್ಡದು’ ಎಂಬುದನ್ನು ಬದುಕಿನಲ್ಲಿ ತೋರಿಸಿಕೊಟ್ಟ ಶಾಸ್ತ್ರಿಯವರ ತತ್ವಗಳು ಯುವ ಪೀಳಿಗೆಗೆ ದಾರಿದೀಪವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹೀಂ, ನಿಗಮ ಮಂಡಳಿ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಶಹೀದ್ ತೆಕ್ಕಿಲ್, ವಿಶ್ವಾಸ್ಕುಮಾರ್ ದಾಸ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್, ಮ.ನ.ಪಾ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಕೋಟ್ಯಾನ್, ಅಬ್ದುಲ್ ಜೆ. ಸಲೀಂ, ಮೋಹನ್ ಕೋಟ್ಯಾನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Post a Comment