ಮಂಗಳೂರು: ನಾಡಿನಾದ್ಯಂತ ದಸರಾ ಸಂಭ್ರಮ ಮನೆ ಮಾಡಿದ್ದು, ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಮೈಸೂರಿನ ಬಳಿಕ ದಸರಾ ಆಚರಣೆಯಲ್ಲಿ ಮಂಗಳೂರು ತನ್ನದೇ ಆದ ಸಾಂಸ್ಕೃತಿಕ ವೈಶಿಷ್ಟ್ಯ ಹಾಗೂ ಜನಾಕರ್ಷಣೆ ಹೊಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ದಸರಾ ರಜೆಯನ್ನು ಇನ್ನೂ ಎರಡು ದಿನ ವಿಸ್ತರಿಸುವಂತೆ ಶಾಸಕ ವೇದವ್ಯಾಸ ಕಾಮತ್ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 3ರಿಂದ 21ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಆದರೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಕುದ್ರೋಳಿ ಭಗವತಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಆಚಾರ್ಯ ಮಠ ವಠಾರದ ಶ್ರೀ ವೆಂಕಟರಮಣ ದೇವಸ್ಥಾನ ಸೇರಿದಂತೆ ವಿವಿಧೆಡೆ ಅಕ್ಟೋಬರ್ 23ರ ಮುಂಜಾನೆಯವರೆಗೂ ದಸರಾ ಸಂಭ್ರಮ ಮುಂದುವರಿಯಲಿದೆ.
ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದಸರಾ ಆಚರಣೆಯಲ್ಲಿ ಪಾಲ್ಗೊಳ್ಳುವ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ದಸರಾ ರಜೆಯನ್ನು ಎರಡು ದಿನ ವಿಸ್ತರಿಸುವ ಅಗತ್ಯವಿದೆ ಎಂದು ಶಾಸಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಯಾವುದೇ ಒತ್ತಡವಿಲ್ಲದೆ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಪದವಿ ಹಂತದವರೆಗೂ ರಜೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಿಲಾದ್ ಹಬ್ಬದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ನೀಡುವಂತೆ ಮನವಿ ಸಲ್ಲಿಸಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ. ಇದೀಗ ದಸರಾ ವಿಚಾರದಲ್ಲಿಯೂ ಅಂತಹ ನಿರ್ಲಕ್ಷ್ಯ ಧೋರಣೆ ಅನುಸರಿಸದೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
Post a Comment