ಕುಂಬಳೆ: ಕೋಳಿ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬಾಯ್ಲರ್‌ನಿಂದ ಅತ್ಯಂತ ವೇಗವಾಗಿ ಗ್ಯಾಸ್ ಬಿಡುಗಡೆಯಾದ ಪರಿಣಾಮ ಒಡಿಶಾ ಮೂಲದ 19 ವರ್ಷದ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ (ಅ.4) ಕುಂಬಳೆ ಸಮೀಪದ ಅನಂತಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಅನಂತಪುರ ಕೈಗಾರಿಕಾ ಪ್ರದೇಶದಲ್ಲಿರುವ ‘ಆಕ್ಸಿಜನ್ ಪ್ರೋಮ್ಯಾಕ್ಸ್’ ಕೋಳಿ ತ್ಯಾಜ್ಯ ಸಂಸ್ಕರಣಾ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರ್ಮಿಕರು ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಬಾಯ್ಲರ್‌ನಿಂದ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಬಿಡುಗಡೆಯಾಗಿದೆ ಎನ್ನಲಾಗಿದೆ.
ಗ್ಯಾಸ್‌ನ ತೀವ್ರ ಪರಿಣಾಮಕ್ಕೆ ಒಳಗಾದ ಮಹೇಶ್ವರ್ (19) ಮೃತಪಟ್ಟಿದ್ದಾರೆ. ಘಟನೆಯಲ್ಲಿ ತನುಜಿ (24) ಹಾಗೂ ಸಿದ್ಧಾನಂದ (21) ಗಾಯಗೊಂಡಿದ್ದಾರೆ. ತನುಜಿಯವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ಧಾನಂದ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ತಕ್ಷಣ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಯ್ಲರ್‌ನಿಂದ ಗ್ಯಾಸ್ ಏಕಾಏಕಿ ಬಿಡುಗಡೆಯಾಗಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ. ಘಟಕದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ, ಬಾಯ್ಲರ್‌ನ ನಿರ್ವಹಣೆ ಹಾಗೂ ಕಾರ್ಯಾಚರಣೆಯಲ್ಲಿ ಯಾವುದೇ ಲೋಪವಾಗಿತ್ತೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಿಂದ ಅನಂತಪುರ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಮಿಕರ ಸುರಕ್ಷತೆ ಕುರಿತು ಪ್ರಶ್ನೆಗಳು ಎದ್ದಿವೆ. ದುರಂತದ ಸಂಪೂರ್ಣ ಕಾರಣ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
Post a Comment