ಮಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿಗಳನ್ನು ರಚಿಸಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೆಹಮಾನ್ ಖಾನ್ ಕುಂಜತ್ತಬೈಲ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ರಂಗಸ್ವರೂಪ (ರಿ) ಕುಂಜತ್ತಬೈಲ್ ತಂಡದ ಅಧ್ಯಕ್ಷರಾಗಿ, ಮರಕಡ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಉಪಾಧ್ಯಕ್ಷರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ನಾಡು ಮತ್ತು ನುಡಿಯ ಮೇಲಿನ ಅಪಾರ ಪ್ರೀತಿ ಹಾಗೂ ಶ್ರದ್ಧೆಯೊಂದಿಗೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಅವರ ನಾಮನಿರ್ದೇಶನವನ್ನು ಕನ್ನಡ ಪ್ರೇಮಿಗಳು ಹರ್ಷದಿಂದ ಸ್ವಾಗತಿಸಿದ್ದಾರೆ.