ಮಂಗಳೂರು : ನಾಲ್ಕು ವರ್ಷಗಳಿಂದ ಸ್ಟೈಫಂಡ್ ಪಡೆಯದೆ ಸಂಕಷ್ಟ ಅನುಭವಿಸುತ್ತಿದ್ದ ವೆನ್ಲಾಕ್ ಸರ್ಕಾರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವ ಭರವಸೆ ದೊರೆತಿದೆ.
ಡಿವೈಎಫ್ಐ ಮತ್ತು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆ ನಡೆಸಿದ ಹಿನ್ನೆಲೆ, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ.ಎಸ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಸಂಘಟನೆ ನಾಯಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ 15 ದಿನಗಳೊಳಗೆ ಸ್ಟೈಫಂಡ್ ಬಿಡುಗಡೆಯಾಗುವಂತೆ ಇಲಾಖೆಯ ಮಟ್ಟದಲ್ಲಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು. ಜೊತೆಗೆ ನರ್ಸಿಂಗ್ ವಿದ್ಯಾರ್ಥಿಗಳಿಗೆ ಹೆಪಟೈಟಿಸ್-ಬಿ ಲಸಿಕೆ ಹಾಗೂ ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದೂ ತಿಳಿಸಲಾಯಿತು.
ಅಧೀಕ್ಷಕರ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು. ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಇನಾಸ್ ಬಿ.ಕೆ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿದ್ದರು.