ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿದ್ದ ಆದೇಶದ ಜಾರಿಗೆ ಹೈಕೋರ್ಟ್ ತಡೆ ನೀಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಸೆಪ್ಟೆಂಬರ್ 18ರಂದು ಹೊರಡಿಸಲಾದ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾ ಪೀಠದಲ್ಲಿ ಮಂಗಳವಾರ ವಿಚಾರಣೆ ನಡೆದಿದ್ದು, ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಬಾರದು ಎಂದು ಮಧ್ಯಂತರ ತಡೆ ನೀಡಲಾಗಿದೆ. ಪ್ರತಿವಾದಿಗಳಾದ ಗೃಹ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಲಾಗಿದೆ.
ತಮ್ಮ ಅಹವಾಲು ಆಲಿಸದೆ ಏಕಪಕ್ಷೀಯವಾಗಿ ಗಡಿಪಾರು ಆದೇಶ ಹೊರಡಿಸಲಾಗಿದೆ ಎಂದು ತಿಮರೋಡಿ ಕೋರಿಕೆಯಲ್ಲಿ ಉಲ್ಲೇಖಿಸಿದ್ದಾರೆ.
Social Plugin