Top News

ಅಮರಮೂಡ್ನೂರಿನಲ್ಲಿ ನೂತನ MRF ಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ ; ಜಲ ಜೀವನ್ ಮಿಷನ್ ಕಾಮಗಾರಿ ವೇಗಗೊಳಿಸಲು ಮನವಿ

ಬೆಂಗಳೂರು: ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ಜಲ ಜೀವನ್ ಮಿಷನ್ (ಹರ್ ಘರ್ ಜಲ್) ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಸುಳ್ಯ ತಾಲೂಕಿನ ಅಮರಮೂಡ್ನೂರಿನಲ್ಲಿ ನೂತನ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರ (MRF) ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಶ್ರೀ ರಂದೀಪ್ ಐಎಎಸ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ 230 ಗ್ರಾಮ ಪಂಚಾಯತಿಗಳಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನೂ 42 ಗ್ರಾಮ ಪಂಚಾಯತಿಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲೂ 155 ಗ್ರಾಮ ಪಂಚಾಯತಿಗಳಲ್ಲಿ ಕಾಮಗಾರಿ ಮುಕ್ತಾಯಗೊಂಡಿದ್ದು, 39 ಗ್ರಾಮ ಪಂಚಾಯತಿಗಳಲ್ಲಿ ಕಾಮಗಾರಿ ಮುಂದುವರಿದಿದೆ.
ಯೋಜನೆ ಆರಂಭವಾಗಿ ಐದು ವರ್ಷಗಳು ಕಳೆದರೂ ಹಲವೆಡೆ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ, ಸಾವಿರಾರು ಗ್ರಾಮೀಣ ಮನೆಗಳಿಗೆ ಯೋಜನೆಯ ಸಂಪೂರ್ಣ ಲಾಭ ದೊರಕಲು ವಿಳಂಬವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಗಮನಿಸಿದ ಶಾಸಕರು, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ರಂದೀಪ್ ಐಎಎಸ್ ಅವರಿಗೆ ಈ ಕುರಿತು ತಕ್ಷಣ ಪರಿಶೀಲನೆ ನಡೆಸಿ ಬಾಕಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದರು.
ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನ 68 ಗ್ರಾಮ ಪಂಚಾಯತಿಗಳಿಂದ ಸಂಗ್ರಹವಾಗುವ ಒಣಕಸವನ್ನು ಪ್ರಸ್ತುತ ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಇರುವ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರದಲ್ಲಿ ಸಂಸ್ಕರಿಸಲಾಗುತ್ತಿದೆ. ಆದರೆ, ಈ ಘಟಕದ ಸಾಮರ್ಥ್ಯ ಕೇವಲ 7 ಟನ್ ಆಗಿದ್ದು, ಸಂಗ್ರಹವಾಗುತ್ತಿರುವ ಕಸದ ಪ್ರಮಾಣ ಹೆಚ್ಚಿರುವುದರಿಂದ ಹಾಗೂ ಭೌಗೋಳಿಕ ವ್ಯಾಪ್ತಿ ವಿಸ್ತಾರವಾಗಿರುವುದರಿಂದ ಕಸದ ನಿರ್ವಹಣೆಯಲ್ಲಿ ಗಂಭೀರ ಅಡಚಣೆಗಳು ಎದುರಾಗುತ್ತಿವೆ ಎಂದು ಶಾಸಕರು ಆಯುಕ್ತರ ಗಮನಕ್ಕೆ ತಂದರು.
ಈ ಹಿನ್ನಲೆಯಲ್ಲಿ, ಸುಳ್ಯ ತಾಲೂಕಿನ ಅಮರಮೂಡ್ನೂರಿನಲ್ಲಿ ‘ಕೆ-ಶೋರ್’ ಯೋಜನೆಯಡಿ 10 ಟನ್ ಸಾಮರ್ಥ್ಯದ ನೂತನ MRF ನಿರ್ಮಿಸುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದರು. ಈ ಯೋಜನೆಗಾಗಿ ರೂ. 595 ಲಕ್ಷಗಳ ಅಂದಾಜು ವೆಚ್ಚದ ವಿಸ್ತೃತ ಯೋಜನಾ ವರದಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವರದಿಯ ಆಧಾರದಲ್ಲಿ ನೂತನ MRF ಅನ್ನು ಶೀಘ್ರವಾಗಿ ನಿರ್ಮಿಸುವಂತೆ ಮನವಿ ಮಾಡಿದರು.
ಇದಕ್ಕೆ ಹೆಚ್ಚುವರಿಯಾಗಿ, ಜಿಲ್ಲೆಯಲ್ಲಿನ ಬಯೋ ಹಾಗೂ ಮೆಡಿಕಲ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು Incinerator Machine ಘಟಕದ ಅಗತ್ಯವಿದೆ ಎಂಬುದನ್ನೂ ಶಾಸಕರು ಆಯುಕ್ತರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ರಂದೀಪ್ ಐಎಎಸ್, ಎಲ್ಲಾ ವಿಷಯಗಳನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Post a Comment

Previous Post Next Post