Top News

ಕಾಣಿಯೂರಿನಲ್ಲಿ ಅಕ್ರಮ ಡೀಸೆಲ್ ಸಂಗ್ರಹ ಪತ್ತೆ ; 4,175 ಲೀಟರ್ ಡೀಸೆಲ್ ಜಪ್ತಿ, ವ್ಯಕ್ತಿಯ ವಿರುದ್ಧ ಪ್ರಕರಣ

ಬೆಳ್ತಂಗಡಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಾಣಿಯೂರು ಗ್ರಾಮದ ಮುದಲ್ತಿಯಾರ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 9ರ ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳ ತಂಡ ಸ್ಥಳಕ್ಕೆ ದಾಳಿ ನಡೆಸಿದರು.

ಪೊಲೀಸರು ಕಣಿಯೂರು ಗ್ರಾಮದ ಮುದಲ್ತಿಯಾರ್ ಪ್ರದೇಶದಲ್ಲಿರುವ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಹಾಗೂ 35 ಲೀಟರ್ ಸಾಮರ್ಥ್ಯದ 5 ಕ್ಯಾನ್‌ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿರುವುದು ಪತ್ತೆಯಾಯಿತು. ಅಲ್ಲದೆ ಸ್ಥಳದಲ್ಲಿ ಇನ್ನೂ ಕೆಲವು ಖಾಲಿ ಬ್ಯಾರೆಲ್‌ಗಳು, ಕ್ಯಾನ್‌ಗಳು ಮತ್ತು ಸಂಬಂಧಿತ ಇತರೆ ಸಾಮಗ್ರಿಗಳು ಸಹ ಪತ್ತೆಯಾದವು.

ಜಪ್ತಿ ಮಾಡಿದ ಡೀಸೆಲ್ ಹಾಗೂ ಇತರೆ ವಸ್ತುಗಳ ಒಟ್ಟು ಅಂದಾಜು ಮೌಲ್ಯ ಸುಮಾರು 3.50 ಲಕ್ಷ ರೂ. ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಜಗದೀಶ್ ಬಳಿ ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಡೀಸೆಲ್ ಸಂಗ್ರಹಿಸಿರುವುದು ತಿಳಿದುಬಂದಿದೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 35/2026 ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 287, ಅವಶ್ಯಕ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7, ಪೆಟ್ರೋಲಿಯಂ ಕಾಯ್ದೆ 1934ರ ಕಲಂ 23 ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

Previous Post Next Post