Top News

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಜನಪ್ರಿಯ ಪರಂಪರಾತ್ಮಕ ಕ್ರೀಡೆ ಕಂಬಳವನ್ನು ಉಳಿಸಿ ಬೆಳೆಸಲು ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಮತ್ತು ಹಣಕಾಸಿನ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ “ಮೂಡೂರು–ಪಡೂರು” ಜೋಡುಕರೆ ಬಯಲು ಕಂಬಳಕೂಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಕಂಬಳವು ಜಾತಿ-ಧರ್ಮ ಭೇದವಿಲ್ಲದೆ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು, ಇದನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಪ್ರಜಾಪ್ರಭುತ್ವವೂ ಬಲವಾಗಬೇಕು. ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲೂ ಈ ಕಾರ್ಯ ಮುಂದುವರಿಯಲಿದ್ದು, ಜನರ ಬೆಂಬಲದೊಂದಿಗೆ 2028ರಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಹಿಂದಿನ ಅವಧಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಕ್ಷೇತ್ರಕ್ಕೆ ಸುಮಾರು ಐದು ಸಾವಿರ ಕೋಟಿ ರೂ. ಅನುದಾನ ತರಿಸಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು ಎಂದು ಸಿಎಂ ತಿಳಿಸಿದರು. ಮುಂದಿನ ಆರ್ಥಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳದ ಬೆತ್ತ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಸ್ತಾವಿಕವಾಗಿ ಮಾತನಾಡಿ, ಬಂಟ್ವಾಳ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ನೀಡಿದ ಸಹಕಾರವನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಎಂಎಲ್‌ಸಿಗಳಾದ ಸಲೀಮ್ ಅಹ್ಮದ್, ಐವನ್ ಡಿಸೋಜ, ಶಾಸಕರಾದ ಅಶೋಕ್ ಕುಮಾರ್ ರೈ, ಟಿ.ಡಿ. ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು

Post a Comment

Previous Post Next Post