ಉಜಿರೆಯಲ್ಲಿ ಗಾಂಜಾ ಮಾರಾಟ ಯತ್ನ ಪ್ರಕರಣ: 17ವರ್ಷದ ಬಳಿಕ ಶಿಕ್ಷೆ ಪ್ರಕಟ, ಆರೋಪಿಗೆ 5 ವರ್ಷ ಕಾರಾಗೃಹ ವಾಸ

ಮಂಗಳೂರು: ನಿಷೇಧಿತ ಮಾದಕವಸ್ತು ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.

2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲ್ಲೂಕಿನ ಉಜಿರೆ ರಥಬೀದಿ ಪ್ರದೇಶದಲ್ಲಿ ಸುಮಾರು 50,000 ರೂ. ಮೌಲ್ಯದ 1.500 ಕೆ.ಜಿ. ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ಅವರು ಏಪ್ರಿಲ್ 10, 2026ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿ, ಏಪ್ರಿಲ್ 16ರಂದು ಶಿಕ್ಷೆ ಪ್ರಕಟಿಸಿದರು.

ನ್ಯಾಯಾಲಯವು ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(c) r/w 20(b)(ii)(B) ಅಡಿಯಲ್ಲಿ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ 2 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಜೊತೆಗೆ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಕಠಿಣ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
Previous Post Next Post