ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ದಿನಾಂಕ ಮಾ.3ರಂದು ಮುಂಜಾನೆ, ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರ ನೇತೃತ್ವದಲ್ಲಿ ತಂಡವು ನೂಜಿಬಾಳ್ತಿಲ ಗ್ರಾಮದ ಕನ್ವರೆ ಪ್ರದೇಶದಲ್ಲಿ ತಪಾಸಣೆ ನಡೆಸಿತು.
ಈ ವೇಳೆ KA 11 B 9413 ನೋಂದಣಿಯ ಕಂಟೈನರ್ ಲಾರಿಯನ್ನು ತಪಾಸಣೆ ನಡೆಸಿದಾಗ, 20 ಜಾನುವಾರುಗಳನ್ನು ಅಮಾನವೀಯವಾಗಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಲಾರಿಯಲ್ಲಿದ್ದ ಒಬ್ಬ ಆರೋಪಿತ ಸ್ಥಳದಿಂದ ಪರಾರಿಯಾಗಿದ್ದು, ಉಳಿದವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ವಿಚಾರಣೆಯಲ್ಲಿ ಬಂಧಿತನನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಇರ್ಫಾನ್ (26) ಎಂದು ಗುರುತಿಸಲಾಗಿದ್ದು, ಪರಾರಿಯಾದ ಆರೋಪಿಯನ್ನು ನಯ್ಯು ಅಲಿಯಾಸ್ ನಯಾಝ್ ಎಂದು ತಿಳಿದುಬಂದಿದೆ. ಲಾರಿಯ ಮಾಲೀಕ ಅಬ್ದುಲ್ ರಹಿಮಾನ್ ಎಂಬಾತ ಜಾನುವಾರುಗಳನ್ನು ಲೋಡ್ ಮಾಡಿ ಕಳುಹಿಸಿದ್ದಾನೆ ಎಂಬುದೂ ತನಿಖೆಯಲ್ಲಿ ಬಹಿರಂಗವಾಗಿದೆ.
ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಪೊಲೀಸರು ಲಾರಿ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 36/2026ರಡಿ ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 4, 11ರಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ