ಬಂಟ್ವಾಳ : ಗಾಂಜಾ ಮಾರಾಟ ಪ್ರಕರಣ ; ಆರೋಪಿಗೆ 7 ವರ್ಷ ಜೈಲು ಶಿಕ್ಷೆ ; ಬಂಟ್ವಾಳ ನ್ಯಾಯಾಲಯದ ತೀರ್ಪು

ಬಂಟ್ವಾಳ: 2020ರಲ್ಲಿ ದಾಖಲಾಗಿದ್ದ ಗಾಂಜಾ ಮಾರಾಟ ಯತ್ನ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹70,000 ದಂಡ ವಿಧಿಸಿದೆ.

2020ರ ನವೆಂಬರ್ 10ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಪೊಲೀಸ್ ನಿರೀಕ್ಷಕ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ₹49,000 ಮೌಲ್ಯದ 1.480 ಕಿಲೋಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 126/2020ರಂತೆ ಪ್ರಕರಣ ದಾಖಲಾಗಿದ್ದು, ಆಗಿನ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು, ಮಂಗಳೂರು ಬಂದರು ನಿವಾಸಿ ಟಿ.ಪಿ. ಫಾರೂಕ್ (50) ಎಂಬ ಆರೋಪಿಗೆ 7 ವರ್ಷಗಳ ಶಿಕ್ಷೆ ಮತ್ತು ₹70,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜೂಡಿತಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
Previous Post Next Post