ಬೆಂಗಳೂರಿನಲ್ಲಿ ನಡೆದ ಒಂದು ಕಾರ್ಯಕ್ರಮದ ವೇಳೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ.
ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ. ಪಿಜಿಆರ್ ಸಿಂಧ್ಯ ಅವರ ಅಭಿನಂದನಾ ಸಮಾರಂಭ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಹೆಗ್ಡೆ ಅವರು ಭಾಷಣ ಮಾಡುತ್ತಿದ್ದಾಗ ಏಕಾಏಕಿ ಅಸ್ವಸ್ಥರಾದರು. ತಕ್ಷಣವೇ ಸ್ಥಳದಲ್ಲಿದ್ದವರು ಪ್ರಾಥಮಿಕ ಚಿಕಿತ್ಸೆ ನೀಡಿದರು.
ಅದೇ ವೇಳೆ ಕಾರ್ಯಕ್ರಮದಲ್ಲಿ ಹಾಜರಿದ್ದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅವರು ಸ್ವತಃ ಹೆಗ್ಡೆಯವರನ್ನು ತಮ್ಮ ಕಾರಿನಲ್ಲಿ ಸಮೀಪದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದರು.
ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿ (ಐಸಿಯು) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಹರ್ಷಿತಾ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಮೇಲ್ವಿಚಾರಣೆ ಮಾಡುತ್ತಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.
ಶೀಘ್ರದಲ್ಲೇ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
Tags
ರಾಜ್ಯ