ನವದೆಹಲಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಮಹತ್ವದ ಮ್ಯಾರಥಾನ್ ಸಭೆಗಳನ್ನು ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸುಮಾರು 45 ನಿಮಿಷಗಳ ಕಾಲ ಪ್ರತ್ಯೇಕ ಸಭೆ ನಡೆದಿದ್ದು, ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ನಾಯಕತ್ವ ಬದಲಾವಣೆ ಕುರಿತಾಗಿ ಗಂಭೀರ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಆಡಳಿತದ ಸಾಧಕ-ಬಾಧಕಗಳ ಬಗ್ಗೆ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ನಾಯಕತ್ವ ಬದಲಾವಣೆ ಕುರಿತ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
“ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕರ್ನಾಟಕದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಮತ್ತು ನಾನು ಭಾಗವಹಿಸಿದ್ದೇವೆ. ಸಭೆಯಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಕುರಿತ ಚರ್ಚೆ ಮಾತ್ರ ನಡೆದಿದೆ,” ಎಂದು ಅವರು ಹೇಳಿದರು.
“ನಾಯಕತ್ವ ಬದಲಾವಣೆ ಬಗ್ಗೆ ನಡೆಯುತ್ತಿರುವ ಎಲ್ಲ ಊಹಾಪೋಹಗಳು ಕೇವಲ ಊಹಾಪೋಹಗಳಷ್ಟೇ. ಕರ್ನಾಟಕ ಸೇರಿದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್ ರಾಜ್ಯಗಳ ರಾಜ್ಯಸಭಾ ಹಾಗೂ ಪರಿಷತ್ ಸ್ಥಾನಗಳ ಅಭ್ಯರ್ಥಿಗಳ ಕುರಿತು ಚರ್ಚೆ ನಡೆದಿದೆ. ಶೀಘ್ರದಲ್ಲೇ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುವುದು,” ಎಂದು ವೇಣುಗೋಪಾಲ್ ಸ್ಪಷ್ಟನೆ ನೀಡಿದರು.
Tags
ರಾಜ್ಯ