ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನ ಸುದ್ದಿ ಚಿತ್ರರಂಗದ ಕಲಾವಿದರು ಹಾಗೂ ಅಭಿಮಾನಿಗಳಲ್ಲಿ ದುಃಖ ಮೂಡಿಸಿದೆ.
ಮೂಲಗಳ ಪ್ರಕಾರ, ದಿಲೀಪ್ ರಾಜ್ ಅವರಿಗೆ ಮನೆಯಲ್ಲಿ ಇದ್ದಾಗಲೇ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ದಿಲೀಪ್ ರಾಜ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ಗಮನಾರ್ಹ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದರು. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.
ಸಿನಿಮಾಗಳ ಜೊತೆಗೆ ಕಿರುತೆರೆಯಲ್ಲೂ ದಿಲೀಪ್ ರಾಜ್ ತಮ್ಮದೇ ಆದ ಛಾಪು ಮೂಡಿಸಿದ್ದರು.
‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು, ‘ಪಾರು’ ಹಾಗೂ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ನಿರ್ಮಿಸಿ ಯಶಸ್ಸು ಕಂಡಿದ್ದರು.
ಅವರ ನಿಧನಕ್ಕೆ ಚಿತ್ರರಂಗದ ಹಲವು ಗಣ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
Tags
ರಾಜ್ಯ