Belthangady | ಬೆಳ್ತಂಗಡಿಯಲ್ಲಿ ಅಂತರಾಜ್ಯ ಕಳ್ಳರ ಜಾಲ ಭೇದಿಸಿದ ಪೊಲೀಸರು; ₹23.67 ಲಕ್ಷ ಮೌಲ್ಯದ ಚಿನ್ನ, ನಗದು ವಶ

ಬೆಳ್ತಂಗಡಿ : ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಹಲವು ಕಳ್ಳತನ ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ಸುಮಾರು ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಏಪ್ರಿಲ್ 5ರಂದು ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣದ ತನಿಖೆ ವೇಳೆ ಬಂಟ್ವಾಳದ ಕೊಳ್ನಾಡು ಮೂಲದ, ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿರುವ ಹಮೀದ್ ಎಂಬಾತನನ್ನು ಮೇ 15ರಂದು ಬಂಧಿಸಲಾಗಿತ್ತು. ಆರೋಪಿಯಿಂದ ಕಳ್ಳತನಕ್ಕೆ ಬಳಸಿದ್ದ ಕಾರನ್ನೂ ವಶಪಡಿಸಿಕೊಳ್ಳಲಾಗಿತ್ತು.

ಆರೋಪಿಯ ವಿಚಾರಣೆಯ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ಜೂನ್ 7ರಂದು ಮತ್ತೋರ್ವ ಆರೋಪಿ ಜಾಬೀರ್ ಅಲಿಯಾಸ್ ಜಾಬೀ (38) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಈ ವೇಳೆ ಪುಂಜಾಲಕಟ್ಟೆ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು, ಉಪ್ಪಿನಂಗಡಿ ಠಾಣೆಯ 2025ರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹23.67 ಲಕ್ಷ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಆರೋಪಿಗಳು ಪುಂಜಾಲಕಟ್ಟೆ ಮತ್ತು ಉಪ್ಪಿನಂಗಡಿ ಪ್ರಕರಣಗಳ ಹೊರತಾಗಿ ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇನ್ನೂ ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಒಟ್ಟು ಐದು ಪ್ರಕರಣಗಳಲ್ಲಿ ಇವರ ಪಾತ್ರವಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಸಿಪಿಐ ರವಿ ಬಿ.ಎಸ್., ಸಿಪಿಐ ನಾಗರಾಜ್ ಹೆಚ್.ಇ., ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Post a Comment

Previous Post Next Post