ಮಂಗಳೂರು: ವೃದ್ಧ ಮಹಿಳೆಯೊಬ್ಬರ ಕುತ್ತಿಗೆಯಿಂದ ಸುಮಾರು ₹1.50 ಲಕ್ಷ ಮೌಲ್ಯದ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಜೂನ್ 14ರಂದು ಮಧ್ಯಾಹ್ನ ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳುವ ನೆಪದಲ್ಲಿ ತಡೆದು, ಅವರ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮೀ ಪೆಂಡೆಂಟ್ ಹೊಂದಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸರ ಕಳವು ಕೃತ್ಯದಲ್ಲಿ ತಾವು ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರವಿ ಬೌರಾ (38) ಹಾಗೂ ಮೊಹಮ್ಮದ್ ಸಾಹಿಲ್ @ ಸಿದ್ದೀಖಿ (26) ಎಂದು ಗುರುತಿಸಲಾಗಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೈನ್ ಎಂಬಾತನನ್ನೂ ವಶಕ್ಕೆ ಪಡೆದಿದ್ದ ವೇಳೆ, ಆತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅವರನ್ನು ತಳ್ಳಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವಿನಾಯಕ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಜುಲೈ 6ರವರೆಗೆ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪರಾರಿಯಾಗಿರುವ ಅಲ್ತಾಫ್ ಹುಸೈನ್ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣವನ್ನು ತ್ವರಿತವಾಗಿ ಭೇದಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.