Bihar | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆ ಹಿಂಸಾಚಾರ: 117 ಶಂಕಿತರ ಫೋಟೋ ಬಿಡುಗಡೆ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಜುಲೈ 22ರಂದು ನಡೆದ ಕಲ್ಲು ತೂರಾಟ ಹಾಗೂ ಗಲಭೆಗೆ ಸಂಬಂಧಿಸಿದಂತೆ 117 ಶಂಕಿತರ ಫೋಟೋಗಳನ್ನು ಪಾಟ್ನಾ ಪೊಲೀಸರು ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಂದ ಅವರ ಗುರುತು ಪತ್ತೆಗೆ ಸಹಕಾರ ಕೋರಿದ್ದಾರೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಗಾಂಧಿ ಮೈದಾನದಿಂದ ಬಿಹಾರ ವಿಧಾನಸಭೆಯವರೆಗೆ ಭಾರಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ವೇಳೆ ಕೆಲವರು ನಿಯಂತ್ರಣ ಕಳೆದುಕೊಂಡು ಭದ್ರತಾ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಮೊದಲು ವಾಟರ್ ಕ್ಯಾನನ್ ಬಳಸಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಲಾಠಿಚಾರ್ಜ್ ನಡೆಸಿ ಗುಂಪನ್ನು ಚದುರಿಸಿದರು.

ಇದೇ ವೇಳೆ ಪ್ರತಿಭಟನಾಕಾರರ ಒಂದು ಗುಂಪು ಸ್ಥಳೀಯ ಬಿಜೆಪಿ ಕಚೇರಿಯತ್ತ ತೆರಳಿ ಕಲ್ಲು ತೂರಾಟ ನಡೆಸಿದ ಘಟನೆ ಕೂಡ ನಡೆದಿದ್ದು, ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.

ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಹಾಗೂ ವಿಡಿಯೊಗಳನ್ನು ಪರಿಶೀಲಿಸಿದ ಪೊಲೀಸರು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 117 ಮಂದಿಯನ್ನು ಗುರುತಿಸಿದ್ದಾರೆ. ಬಿಡುಗಡೆ ಮಾಡಿರುವ ಫೋಟೋಗಳಲ್ಲಿರುವ ವ್ಯಕ್ತಿಗಳನ್ನು ಗುರುತಿಸಿದರೆ ಸಾರ್ವಜನಿಕರು ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಗುರುತು ಪತ್ತೆಯಾದ ಬಳಿಕ ಗಲಭೆ, ಸಾರ್ವಜನಿಕ ಆಸ್ತಿ ಹಾನಿ ಹಾಗೂ ಇತರ ಕಾನೂನುಬಾಹಿರ ಕೃತ್ಯಗಳ ಆರೋಪದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಬಿಹಾರದ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.

Post a Comment

Previous Post Next Post