ಮಂಗಳೂರು : ವೈದ್ಯರ ಮೇಲೆ ಹಲ್ಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಅನಿವಾರ್ಯ: ಡಾ. ಟಿ.ಎ. ವೀರಭದ್ರಯ್ಯ


ಮಂಗಳೂರು, ಜುಲೈ 12: ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಆಸ್ಪತ್ರೆಗಳ ಮೇಲಿನ ದಾಳಿಗಳನ್ನು ಕಠಿಣವಾಗಿ ಖಂಡಿಸಿ, ಆರೋಪಿಗಳಿಗೆ ಗರಿಷ್ಠ ಮಟ್ಟದ ಶಿಕ್ಷೆ ವಿಧಿಸುವಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಟಿ.ಎ. ವೀರಭದ್ರಯ್ಯ ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ವಿಶೇಷ ಸಭೆ ಭಾನುವಾರ ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ವೀರಭದ್ರಯ್ಯ ಮಾತನಾಡಿ, ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದ್ದು, ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಬೇಕು ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರಗಳನ್ನು ಹೆಚ್ಚಾಗಿ ಆಯೋಜಿಸುವುದರ ಜೊತೆಗೆ, ವೈದ್ಯರ ಶೈಕ್ಷಣಿಕ ಬೆಳವಣಿಗೆಗಾಗಿ ನಿರಂತರ ವೈದ್ಯಕೀಯ ಶಿಕ್ಷಣ (CME) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸದಸ್ಯರ ಅಕಾಲಿಕ ಮರಣದ ಸಂದರ್ಭಗಳಲ್ಲಿ ಕುಟುಂಬಕ್ಕೆ ನೆರವಾಗುವ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಸದಸ್ಯರು ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚಿಸಿದ ಅವರು, ಅಕ್ಟೋಬರ್‌ನಲ್ಲಿ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಐಎಂಎ ಸಮಾವೇಶದಲ್ಲಿ ಎಲ್ಲ ಸದಸ್ಯರೂ ಭಾಗವಹಿಸುವಂತೆ ಕರೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಹಾಗೂ ಆಸ್ಪತ್ರೆಗಳ ಮೇಲೆ ದಾಳಿ ನಡೆಯುತ್ತಿರುವ ಘಟನೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂತಹ ಪ್ರಕರಣಗಳನ್ನು ಐಎಂಎ ಪದಾಧಿಕಾರಿಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಉಳ್ಳಾಲದಲ್ಲಿ ಐಎಂಎ ನೂತನ ಶಾಖೆ ಆರಂಭಿಸಲು ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಇದೇ ವೇಳೆ ಭರವಸೆ ನೀಡಿದರು.

ಸಭೆಯಲ್ಲಿ ಡಾ. ವೀರಭದ್ರಯ್ಯ ಅವರನ್ನು ಸಂಘಕ್ಕೆ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.

ಕರ್ನಾಟಕ ವೈದ್ಯಕೀಯ ಮಂಡಳಿಯ ರಾಜ್ಯಾಧ್ಯಕ್ಷ ಡಾ. ಯೋಗಾನಂದ ರೆಡ್ಡಿ, ಐಎಂಎ ರಾಜ್ಯ ಉಪಾಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಹಾಗೂ ಸಹಾಯಕ ಕಾರ್ಯದರ್ಶಿ ಡಾ. ಮಹೇಶ್ ಮಾತನಾಡಿದರು.

ಐಎಂಎ ಮಂಗಳೂರು ಶಾಖೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಸ್ವಾಗತಿಸಿ ಸಭೆಯ ಉದ್ದೇಶ ವಿವರಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್, ಮಾಜಿ ಅಧ್ಯಕ್ಷ ಡಾ. ಜಿ.ಕೆ. ಭಟ್, ಮಾಜಿ ಕಾರ್ಯದರ್ಶಿ ಡಾ. ಅವಿನ್ ಆಳ್ವ, ಚುನಾಯಿತ ಅಧ್ಯಕ್ಷ ಡಾ. ಉಲ್ಲಾಸ್ ಶೆಟ್ಟಿ ಹಾಗೂ ಕೋಶಾಧಿಕಾರಿ ಡಾ. ಜೂಲಿಯನ್ ಸಲ್ದಾನಾ ಉಪಸ್ಥಿತರಿದ್ದರು.

ಕುಮಾರಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಡಾ. ಪ್ರಕಾಶ ಹರೀಶ್ಚಂದ್ರ ವಂದಿಸಿದರು.

Post a Comment

Previous Post Next Post