ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 21 ವರ್ಷದ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿ ಚೇತನ್‌ನನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಲಾವಣ್ಯ ಅವರ ದೂರದ ಸಂಬಂಧಿಯಾಗಿರುವ ಚೇತನ್, ಅವರನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದನು. ತನ್ನ ಪ್ರೀತಿಯನ್ನು ಯುವತಿ ಒಪ್ಪದ ಹಿನ್ನೆಲೆಯಲ್ಲಿ ತಲವಾರು ಬಳಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 95/2026ರಡಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 78, 126 ಹಾಗೂ 103ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಬೆನ್ನತ್ತಿದ ವಿಶೇಷ ಪೊಲೀಸ್ ತಂಡಗಳು ಆರೋಪಿಗಾಗಿ ವ್ಯಾಪಕ ಶೋಧ ನಡೆಸಿ, ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಚೇತನ್‌ನನ್ನು ವಶಕ್ಕೆ ಪಡೆದಿವೆ. ಬಂಧನದ ವೇಳೆ ಆರೋಪಿ ವಿಷ ಸೇವಿಸಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಯ ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Post a Comment