ರಾಜ್ಯದಲ್ಲಿ ನಡೆಯುತ್ತಿರುವ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂದರ್ಭ ಮಾತನಾಡಿದ ಅವರು, ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ಹಂಚಿಕೆ ಸೇರಿದಂತೆ ಪ್ರತಿಯೊಂದು ಹಂತವೂ ದಾಖಲೆಯಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು.
"ನೀಟ್ ಪ್ರಶ್ನೆ ಪತ್ರಿಕೆ ಹಗರಣ ಎಲ್ಲರಿಗೂ ಪಾಠವಾಗಬೇಕು. ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಸಂಬಂಧಿತ ಜಿಲ್ಲಾಧಿಕಾರಿಗಳೇ ನೇರ ಹೊಣೆಗಾರರು. ಯಾವುದೇ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ" ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಇದೇ ವೇಳೆ, "ಜನರು ಸರ್ಕಾರದ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಸರ್ಕಾರವೇ ಜನರ ಮನೆಬಾಗಿಲಿಗೆ ಸೇವೆ ತಲುಪಿಸಬೇಕು. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು. ಅನಗತ್ಯ ತಕರಾರು ಅಥವಾ ನಾನು ನೀಡಿರುವ ಸ್ವಾತಂತ್ರ್ಯದ ದುರುಪಯೋಗ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಸ್ಪಷ್ಟಪಡಿಸಿದರು.
Post a Comment