ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶಕ್ಕೆ ಕರ್ನಾಟಕದ ಮೇಲ್ಮನವಿ! ; CWRC ಆದೇಶಕ್ಕೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು

ನವದೆಹಲಿ, ಜು. 29: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ಕ್ಕೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮೇಲ್ಮನವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಈ ಬಾರಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದ್ದು, ಹಿಂದೆ ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿದ್ದ ಸಮಿತಿ, ಈ ಬಾರಿ ನೀರು ಹರಿಸಲು ಸೂಚಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿಗೆ ಮರಳಿದ ಬಳಿಕ ವಿರೋಧ ಪಕ್ಷದ ನಾಯಕರೊಂದಿಗೆ ಕೂಡ ಈ ವಿಚಾರವಾಗಿ ಚರ್ಚೆ ನಡೆಸುವುದಾಗಿ ಅವರು ಹೇಳಿದರು.

ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆದಿದ್ದು, ಕರ್ನಾಟಕಕ್ಕೆ ಭೇಟಿ ನೀಡಿ ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ಸ್ವತಃ ವೀಕ್ಷಿಸುವಂತೆ ಆಹ್ವಾನ ನೀಡಿದ್ದೇನೆ. ಅವರಿಗಾಗಿ ಹೆಲಿಕಾಪ್ಟರ್ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕದ ಜಲಾಶಯಗಳ ನೈಜ ಸ್ಥಿತಿಯನ್ನು ವೀಕ್ಷಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದರು.

Post a Comment

Previous Post Next Post