ಮಂಗಳೂರು: ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವು ಆಗಸ್ಟ್ 28ರಂದು (ಶುಕ್ರವಾರ) ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನಡೆಯಲಿದೆ.
ಗುರುಪೂಜೆಯ ಅಂಗವಾಗಿ ಬೆಳಗ್ಗೆ 8.45ಕ್ಕೆ ಪ್ರಾರ್ಥನೆಯೊಂದಿಗೆ ಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ರಾತ್ರಿ 7.45ಕ್ಕೆ ಮಹಾ ಗುರುಪೂಜೆ ನೆರವೇರಲಿದೆ. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಗುವುದು.
ಈ ಸಂದರ್ಭದಲ್ಲಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ ಭಾವಚಿತ್ರದ ಶೋಭಾಯಾತ್ರೆಯು ಸಂಜೆ 6 ಗಂಟೆಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಿಂದ ಆರಂಭವಾಗಿ ಗಾಂಧಿನಗರ, ಮಣ್ಣಗುಡ್ಡೆ, ಕಂಬಳಾಸ್ ರಸ್ತೆ ಮಾರ್ಗವಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ.
ಶ್ರೀ ವರಮಹಾಲಕ್ಷ್ಮಿ ಪೂಜೆಯ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ, 9.45ಕ್ಕೆ ಕಲಶ ಪ್ರತಿಷ್ಠಾಪನೆ, 10 ಗಂಟೆಗೆ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಭಜನೆ, 11.30ಕ್ಕೆ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಗುವುದು.
ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮಾಡಿದೆ.
Post a Comment