ಮಂಗಳೂರು : ಮನೆಯ ಕಾಮಗಾರಿಗೆ ಬಂದಿದ್ದ ಕಾರ್ಮಿಕನೊಬ್ಬ ಮನೆಯಲ್ಲಿದ್ದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಗೋಲ್ಡ್ ಕೋಟೆಡ್ ವಾಚ್ ಕಳವು ಮಾಡಿದ್ದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮೇರಿಹಿಲ್ ಬಾಂದೋಟ್ಟು ಪ್ರದೇಶದ ಮನೆಯೊಂದರಲ್ಲಿ ಛಾವಣಿ ಬದಲಾವಣೆ ಹಾಗೂ ಫಾಲ್ಸ್ ಸೀಲಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ, ಮನೆಯ ಟೇಬಲ್ ಡ್ರಾವರ್‌ನಲ್ಲಿದ್ದ ಸಣ್ಣ ಪರ್ಸ್‌ನೊಳಗಿನ 20 ಗ್ರಾಂ ಚಿನ್ನದ ಕಡಗ, 17 ಗ್ರಾಂ ಚಿನ್ನದ ಚೈನ್, 8 ಗ್ರಾಂ ಮತ್ತು 4 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ವಾಚ್ ಸೇರಿದಂತೆ ಒಟ್ಟು ಸುಮಾರು 49 ಗ್ರಾಂ ಚಿನ್ನಾಭರಣ ಕಳುವಾಗಿತ್ತು. ಕಳವಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹6.37 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 305ರಡಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರನ್ನು ವಿಚಾರಣೆಗೊಳಪಡಿಸಿದಾಗ, ಉತ್ತರ ಪ್ರದೇಶ ಮೂಲದ ಹಾಗೂ ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದಲ್ಲಿ ವಾಸವಾಗಿರುವ ಜಹೀರುದ್ದೀನ್ (24) ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕಳವಾಗಿದ್ದ ಎಲ್ಲಾ ಚಿನ್ನಾಭರಣ ಹಾಗೂ ವಾಚ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಿ.ಆರ್. ಮಂಜಪ್ಪ, ಸಬ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿಯ ತಂಡ ಪ್ರಮುಖ ಪಾತ್ರವಹಿಸಿದ್ದು, ಕ್ಷಿಪ್ರ ತನಿಖೆ ನಡೆಸಿ 24 ಗಂಟೆಯೊಳಗೆ ಪ್ರಕರಣವನ್ನು ಭೇದಿಸಿರುವುದಕ್ಕೆ ಪೊಲೀಸ್ ಆಯುಕ್ತರು ಅಭಿನಂದಿಸಿದ್ದಾರೆ.
Post a Comment