ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವ ಸಂಬಂಧ ನಿಯಮಾನುಸಾರ ಸ್ಥಳೀಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳುವಂತೆ ರಾಜ್ಯ ಸರ್ಕಾರವು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಹಿಂದೆ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಆಗಸ್ಟ್ 26ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಆದರೆ, ಕರಾವಳಿ ಭಾಗದಲ್ಲಿ ಚಂದ್ರದರ್ಶನ ಹಾಗೂ ಹಬ್ಬದ ಆಚರಣೆಯ ದಿನಾಂಕವನ್ನು ಪರಿಗಣಿಸಿ ಆಗಸ್ಟ್ 25ರಂದು ರಜೆ ನೀಡುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಜಿಲ್ಲಾಧಿಕಾರಿಗಳು ಆಗಸ್ಟ್ 20ರಂದು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಆಸುಇ), ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ನಿಯಮಾನುಸಾರ ರಜೆ ಘೋಷಿಸುವ ಕುರಿತು ಜಿಲ್ಲಾಡಳಿತ ಮಟ್ಟದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ.
ಈ ಸಂಬಂಧ ಸಿಆಸು ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಪತ್ರ ರವಾನಿಸಿದ್ದಾರೆ.
ಹೀಗಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಿಸುವ ಸಾಧ್ಯತೆ ಇದ್ದು, ಜಿಲ್ಲಾಧಿಕಾರಿಗಳ ಅಧಿಕೃತ ಆದೇಶದ ಬಳಿಕ ರಜೆ ಕುರಿತು ಸ್ಪಷ್ಟತೆ ಸಿಗಲಿದೆ.
Post a Comment