ಬಂಟ್ವಾಳ | ಅಜ್ಜಿಯ ಕೈಯಲ್ಲಿದ್ದ 5ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಸುಲಿಗೆಗೈದ ಮೊಮ್ಮಗನನ್ನು ಬಂಧಿಸಿದ ಪೊಲೀಸರು.!

ಬಂಟ್ವಾಳ: 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮೊಮ್ಮಗನನ್ನೇ ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಆಗಸ್ಟ್ 14ರಂದು ಘಟನೆ ನಡೆದಿತ್ತು. ಸಾದಿಕ್ ಎಂಬವರ ತಾಯಿ ಅವ್ವಮ್ಮ (82) ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಎರಡು ಕೈಗಳಲ್ಲಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ, 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ರಕ್ತಗಾಯವಾಗಿತ್ತು ಎಂದು ಸಾದಿಕ್ ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 70/2026, ಕಲಂ 309(6) BNS-2023ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆಗಸ್ಟ್ 16ರಂದು ಅವ್ವಮ್ಮ ಅವರ ಮೊಮ್ಮಗನಾದ ತೆಂಕಕಜೇಕಾರು ನಿವಾಸಿ ಶಬೀರ್ (33) ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಪತ್ತೆಕಾರ್ಯವನ್ನು ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕಿ ರೋಹಿಸಣಿ ಸಿ.ಕೆ. ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣಾ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಸಿಬ್ಬಂದಿಗಳಾದ ಎಎಸ್‌ಐ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್ ಮತ್ತು ಸತೀಶ್ ಅವರು ನಡೆಸಿದ್ದಾರೆ. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ಸಹಕಾರ ನೀಡಿದ್ದಾರೆ.

Post a Comment

Previous Post Next Post