ಬೆಳ್ತಂಗಡಿ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.
2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯದ ವತಿಯಿಂದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪದ ಮೇರೆಗೆ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ಬೆಳ್ತಂಗಡಿ ಠಾಣೆಯ ಅಂದಿನ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಲಿಂಗಪ್ಪ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕಿ ಆಶೀತ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
Post a Comment