ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ (ಆ.1) ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರು ನದಿಗೆ ಇಳಿಯದಂತೆ ದೇವಸ್ಥಾನ ಆಡಳಿತ ಮತ್ತು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಕುದುರೆಮುಖ, ಕೆಮ್ಮಣ್ಣುಗುಂಡಿ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಶೃಂಗೇರಿ, ನರಸಿಂಹರಾಜಪುರ ಹಾಗೂ ಕೊಪ್ಪ ಭಾಗಗಳಲ್ಲಿ ಶನಿವಾರವೂ ಭಾರೀ ಮಳೆಯಾಗಿದೆ.
ಇನ್ನು ನೆರೆಯ ಕೇರಳದ ಆಲಪ್ಪುಳ, ಎರ್ನಾಕುಲಂ, ಇಡುಕ್ಕಿ, ಕಣ್ಣೂರು, ಕಾಸರಗೋಡು, ಕೊಟ್ಟಾಯಂ, ಕೋಝಿಕ್ಕೋಡ್, ಮಾಹೆ, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್ ಹಾಗೂ ವಯನಾಡ್ ಜಿಲ್ಲೆಗಳಲ್ಲಿಯೂ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜನರು ನದಿ, ತಗ್ಗು ಪ್ರದೇಶಗಳು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಅನಗತ್ಯ ಸಂಚಾರವನ್ನು ತಪ್ಪಿಸಿ, ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
Post a Comment