ಕೋಟೆಕಾರು | ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

ಉಳ್ಳಾಲ : ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡ ಘಟನೆ ಕೋಟೆಕಾರು ಬೀರಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಉಚ್ಚಿಲ ಅಜ್ಜಿನಡ್ಕದಲ್ಲಿ ಹೋಲ್‌ಸೇಲ್ ಬೇಕರಿ ಉತ್ಪನ್ನಗಳನ್ನು ತಯಾರಿಸುವ ‘ವಿಜಿ ಸ್ವೀಟ್ಸ್’ ಮಾಲಕ ಉದಯ ಕುಮಾರ್ ಅವರ ಮಾಲಕತ್ವದ ಬೀರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ದೆಹಲಿ ಮೂಲದ ಶಾಕೀರ್ (32) ಮತ್ತು ಹೈದರ್ (33) ಗಾಯಗೊಂಡ ಕಾರ್ಮಿಕರು.

ಐದು ಮಹಡಿಯ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರೂ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಕೀರ್ ಅವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ತನಿಖೆ ಕೈಗೊಂಡಿದ್ದಾರೆ.

Post a Comment

Previous Post Next Post