ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟ್‌ನ ಕ್ಯಾಬಿನ್‌ನಲ್ಲಿ ಇಬ್ಬರು ಮೀನುಗಾರ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಮಂಗಳವಾರ ಮುಂಜಾನೆ ನಡೆದ ಚೂರಿ ಇರಿತದ ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ.
ಮೃತನನ್ನು ಚಿಕ್ಕಮಗಳೂರು ಮೂಲದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸೋಮವಾರ ರಾತ್ರಿ ಬೋಟ್‌ನಲ್ಲೇ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಮಂಗಳವಾರ ಮುಂಜಾನೆ ಮತ್ತೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಆರೋಪಿ ಗೋವಿಂದ ಚೂರಿಯಿಂದ ಅಭಿಷೇಕ್‌ಗೆ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಮಲ್ಪೆ ಠಾಣೆಯ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು. ಅನಿಲ್ ಕುಮಾರ್ ನೇತೃತ್ವದ ಪೊಲೀಸ್ ಸಿಬ್ಬಂದಿ ಆದರ್ಶ ಹಾಗೂ ಕುಬೇರ ಅವರು ಆರೋಪಿಗಾಗಿ ಶೋಧ ನಡೆಸಿದರು. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು, ಉಡುಪಿ ರೈಲು ನಿಲ್ದಾಣದ ಮೂಲಕ ಹೈದರಾಬಾದ್ ಅಥವಾ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಗೋವಿಂದನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ, ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ಇನ್ನಷ್ಟೇ ಬಹಿರಂಗವಾಗಬೇಕಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Post a Comment