Gas Cylinder Blast | ಮಿಜಾರ್ ಬಳಿ ಸಿಲಿಂಡರ್ ಸ್ಫೋಟ ; ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯ

ಮೂಡುಬಿದಿರೆ : ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು (ಆ.11) ಬೆಳಗ್ಗೆ ಸುಮಾರು 6.30ಕ್ಕೆ ನಡೆದಿದೆ.

ಮಿಜಾರ್ ಸಮೀಪದ ಬಾಡಿಗೆ ಮನೆಯಲ್ಲಿ ಘಟನೆ ಸಂಭವಿಸಿದ್ದು, ಮನೆಯಲ್ಲಿ ವಾಸವಾಗಿದ್ದ ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಗಾಯಗೊಂಡಿದ್ದಾರೆ.

ಸ್ಫೋಟದ ತೀವ್ರತೆಗೆ ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಕುಟುಂಬದ ಮೂವರಿಗೂ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಅವರ ಪತ್ನಿ ಹಾಗೂ ಮಗನಿಗೂ ಗಾಯಗಳಾಗಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿವರಾಮ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಈ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

Previous Post Next Post