ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿದೆ.
ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಆದೇಶದಂತೆ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.
ಇದರ ಜೊತೆಗೆ, ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಅನುಕೂಲವಾಗುವ ರೀತಿಯಲ್ಲಿ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ನಿಷೇಧದ ಅವಧಿಯಲ್ಲಿ ಇಂತಹ ಉತ್ಪನ್ನಗಳ ತಯಾರಿಕೆ ಹಾಗೂ ಮಾರಾಟ ನಡೆಯದಂತೆ ಅಧಿಕಾರಿಗಳು ತಪಾಸಣೆ ನಡೆಸಲಿದ್ದು, ಆದೇಶ ಉಲ್ಲಂಘಿಸುವ ತಯಾರಕರು, ವಿತರಕರು ಹಾಗೂ ಚಿಲ್ಲರೆ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳ ಬಳಕೆಯಿಂದ ಉಂಟಾಗಬಹುದಾದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.
Post a Comment