Udupi | ಉಡುಪಿ: ಮುದರಂಗಡಿಯಲ್ಲಿ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜ ಹ*ತ್ಯೆ

ಉಡುಪಿ : ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಶೂಟೌಟ್ ನಡೆದಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜ (55) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜ ಅವರ ಕಚೇರಿ ಬಳಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅತಿ ಹತ್ತಿರದಿಂದ ಮೂರು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಡೇವಿಡ್ ಡಿಸೋಜ ಅವರ ಹಣೆಗೆ ಒಂದು ಗುಂಡು ಹಾಗೂ ಕೈಗೆ ಎರಡು ಗುಂಡುಗಳು ತಗುಲಿವೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿದ್ದು, ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸ್ ತನಿಖೆ ಚುರುಕು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಡುಬಿದ್ರೆ ಹಾಗೂ ಶಿರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಹತ್ಯೆಯ ಹಿಂದಿನ ಕಾರಣವೇನು ?
ಗುಂಡಿನ ದಾಳಿ ನಡೆಸಿದವರು ಯಾರು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಇತರ ವಿವರಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಮುಂದುವರಿದಿದೆ.

Post a Comment

Previous Post Next Post