ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಕುರಿತು ಚರ್ಚೆ ; ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಭಾಗಿ

ಮಂಗಳೂರು: ಕರಾವಳಿ ಭಾಗದಲ್ಲಿ ಕ್ರಿಕೆಟ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಕುರಿತು ಮಹತ್ವದ ಚರ್ಚೆ ನಡೆದಿದೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA) ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳನ್ನು ಭೇಟಿಯಾಗಿ ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಸಾಧ್ಯತೆಗಳ ಕುರಿತು ಚರ್ಚಿಸಿದರು.

ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಆಸಕ್ತಿ ವ್ಯಕ್ತಪಡಿಸಿದ ವೆಂಕಟೇಶ್ ಪ್ರಸಾದ್ ಅವರು, ಸೂಕ್ತ ಸ್ಥಳವನ್ನು ಗುರುತಿಸುವ ಸಲುವಾಗಿ ಶೀಘ್ರದಲ್ಲೇ ಮಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಅಲ್ಲದೆ, ಮಂಗಳೂರಿನಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರೊಂದಿಗೆ ಸಮಾಲೋಚನೆ ನಡೆಸಿ, ಮುಂದಿನ ಯೋಜನೆಗಳ ಕುರಿತು ಚರ್ಚಿಸುವುದಾಗಿ ಹೇಳಿದರು.

ಮಂಗಳೂರು ನಗರವು ಉತ್ತಮ ರಸ್ತೆ, ರೈಲು, ವಿಮಾನ ಹಾಗೂ ಇತರ ಸಂಪರ್ಕ ವ್ಯವಸ್ಥೆಗಳನ್ನು ಹೊಂದಿರುವುದರಿಂದ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸೂಕ್ತ ಸ್ಥಳವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕ್ರೀಡಾಂಗಣ ನಿರ್ಮಾಣದ ಯೋಜನೆಯನ್ನು ಕಾರ್ಯರೂಪಕ್ಕೆ ತರಲು KSCA ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದರು.

ಇದಕ್ಕೆ ಪೂರಕವಾಗಿ, ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತವಾಗಬಹುದಾದ ಎರಡು ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ತಿಳಿಸಿದರು. ಈ ಸ್ಥಳಗಳನ್ನು ಪರಿಶೀಲಿಸುವ ಸಲುವಾಗಿ ಮಂಗಳೂರಿಗೆ ಭೇಟಿ ನೀಡುವಂತೆ ಅವರು KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರಿಗೆ ಮನವಿ ಮಾಡಿದರು.

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಗೊಂಡರೆ ಕರಾವಳಿ ಭಾಗದ ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಜೊತೆಗೆ ಕ್ರಿಕೆಟ್ ಅಭಿಮಾನಿಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ಸ್ಥಳೀಯವಾಗಿಯೇ ವೀಕ್ಷಿಸುವ ಅವಕಾಶ ಸಿಗಲಿದ್ದು, ನಗರದ ಕ್ರೀಡಾ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ದೊರೆಯುವ ನಿರೀಕ್ಷೆಯಿದೆ.

ಚರ್ಚೆಯಲ್ಲಿ KSCA ಖಜಾಂಚಿ ಬಿ.ಎನ್. ಮಧುಕರ್, ಕಾರ್ಯಕಾರಿಣಿ ಸಮಿತಿ ಸದಸ್ಯ ಪರಿಣಿತ, ಸದಸ್ಯ ಅನುಪ್ ಶ್ರೀಧರ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post