ಮಂಗಳೂರು, ಅ.11: ಮಂಗಳೂರು ದಸರಾ ಎಂದೇ ವಿಶ್ವಪ್ರಸಿದ್ಧಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಮಂಗಳೂರು ನಗರ ಹಾಗೂ ಹೊರವಲಯದ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವ ರವಿವಾರ ಶ್ರದ್ಧಾಭಕ್ತಿಯಿಂದ ಆರಂಭಗೊಂಡಿತು.
ನವರಾತ್ರಿ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಗಣಪತಿ ಪೂಜೆ, ಪುಣ್ಯಾಹವಾಚನ, ಕಲಶ ಪ್ರತಿಷ್ಠಾಪನೆ, ಕೊಪ್ಪರಿಗೆ ಮುಹೂರ್ತ ಹಾಗೂ ದೇವಿ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ವೈದಿಕ ವಿಧಿವಿಧಾನಗಳೊಂದಿಗೆ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ಶ್ರೀ ಶಾರದಾ ದೇವಿ, ಶ್ರೀ ಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಜಯರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಸೇರಿದಂತೆ ಕ್ಷೇತ್ರದ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ನವರಾತ್ರಿ ಆರಂಭದೊಂದಿಗೆ ಮಂಗಳೂರು ನಗರದಲ್ಲಿ ದಸರಾ ಸಂಭ್ರಮ ಮನೆಮಾಡಿದ್ದು, ಮುಂದಿನ ದಿನಗಳಲ್ಲಿ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಭಕ್ತರು ದೇವಿಯ ದರ್ಶನ ಪಡೆದು ವಿಶೇಷ ಪೂಜೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನವರಾತ್ರಿ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
Post a Comment