ಮಂಗಳೂರು, ಅ.12: ಪತ್ನಿಗೆ ಬೇರೊಬ್ಬರೊಂದಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಉಂಟಾದ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ, ಪತಿಯೇ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ವಿಜಯಪುರ ಮೂಲದ, ಪ್ರಸ್ತುತ ಉರುಂದಾಡಿಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸೊನಾಲಿ (30) ಕೊಲೆಯಾದ ಮಹಿಳೆ. ಆಕೆಯ ಪತಿ ಶಿವಲಿಂಗಪ್ಪ ಮಾದರ (40) ಕೊಲೆ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಪತ್ನಿ ಸೊನಾಲಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನ ಶಿವಲಿಂಗಪ್ಪನಿಗೆ ಇತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ ರಾತ್ರಿ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಅದು ತಾರಕಕ್ಕೇರಿದೆ.
ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಯ ಕುತ್ತಿಗೆಗೆ ಇರಿದಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ಸೊನಾಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ದಂಪತಿಗೆ ಇಬ್ಬರು ಪುಟ್ಟ ಮಕ್ಕಳಿದ್ದು, ಘಟನೆ ನಡೆದ ಸಂದರ್ಭದಲ್ಲಿ ಅವರು ಶಿವಲಿಂಗಪ್ಪನ ಸಹೋದರಿಯ ಮನೆಯಲ್ಲಿ ಇದ್ದರು ಎನ್ನಲಾಗಿದೆ. ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ತಂದೆಯೇ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವುದು ಕುಟುಂಬದಲ್ಲಿ ದುರಂತದ ಛಾಯೆ ಮೂಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Post a Comment