ಉಡುಪಿ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಮನೆಯವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಪ್ರದೀಪ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯುವತಿ ಹಾಗೂ ಆಕೆಯ ಸಹೋದರರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರದೀಪ್ ಕಳೆದ ಎಂಟು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅಕ್ಟೋಬರ್ 27ರಂದು ರಾತ್ರಿ 10 ಗಂಟೆ ಸುಮಾರಿಗೆ ನಾಯರ್ ಕೋಡಿನಲ್ಲಿರುವ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪ್ರದೀಪ್ನನ್ನು ಯುವತಿಯ ಸಹೋದರರಾದ ಪ್ರಸನ್ನ ಶೆಟ್ಟಿ, ಸುಧೀರ್ ಶೆಟ್ಟಿ, ಶೈಲೇಶ್ ಶೆಟ್ಟಿ, ಸನತ್, ಕೃಷ್ಣ ಸುಜಯ್ ಹಾಗೂ ಇತರರು ಮೂರು ಕಾರುಗಳಲ್ಲಿ ಬಂದು ಬಲವಂತವಾಗಿ ಯುವತಿಯ ಮನೆಗೆ ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲಿ ಪ್ರಸನ್ನ ಶೆಟ್ಟಿ ಬೆತ್ತದಿಂದ ಪ್ರದೀಪ್ನ ಕಾಲು ಹಾಗೂ ಬೆನ್ನಿಗೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದು, ಇತರ ಆರೋಪಿಗಳು ಮರದ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪ್ರದೀಪ್ನ ಸ್ನೇಹಿತರು ಯುವತಿಯ ಮನೆಗೆ ತೆರಳಿದ ಬಳಿಕ ಹಲ್ಲೆ ನಿಂತಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರದೀಪ್ನನ್ನು ಅಕ್ಟೋಬರ್ 28ರಂದು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತನ್ನ ಅಣ್ಣನ ಬಳಿ ಕಣ್ಣೀರಿಟ್ಟಿದ್ದ ಪ್ರದೀಪ್, ಯುವತಿ ಹಾಗೂ ಆಕೆಯ ಮನೆಯವರು ನಡೆಸಿದ ಹಲ್ಲೆ ಮತ್ತು ಜೀವ ಬೆದರಿಕೆಯ ಕುರಿತು ನೋವು ತೋಡಿಕೊಂಡಿದ್ದ ಎನ್ನಲಾಗಿದೆ. ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಪ್ರದೀಪ್, ಅಕ್ಟೋಬರ್ 30ರ ಸಂಜೆ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರದೀಪ್ ಸಹೋದರ ನೀಡಿದ ದೂರಿನ ಆಧಾರದಲ್ಲಿ ಶ್ರಾವ್ಯ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್, ಶಶಾಂಕ್, ಕೃಷ್ಣ ಸುಜಯ್, ಸನತ್, ಹೊರರಾಜ್ಯದ ಇಬ್ಬರು ಕಾರ್ಮಿಕರು ಸೇರಿದಂತೆ ಇತರರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 149/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 108 ಹಾಗೂ 190ರಂತೆ ಪ್ರಕರಣ ದಾಖಲಿಸಲಾಗಿದೆ.
ಸೂಚನೆ: ವರದಿಯಲ್ಲಿನ ಹಲ್ಲೆ ಮತ್ತು ಬೆದರಿಕೆ ಕುರಿತ ವಿವರಗಳು ದೂರಿನಲ್ಲಿ ಮಾಡಲಾದ ಆರೋಪಗಳಾಗಿವೆ. ಪೊಲೀಸ್ ತನಿಖೆಯ ಬಳಿಕವಷ್ಟೇ ಆರೋಪಗಳ ಸತ್ಯಾಸತ್ಯತೆ ತಿಳಿಯಬೇಕಿದೆ.
Post a Comment