ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಅಪಹರಣ; ಬಾಗಲಕೋಟೆ ಮೂಲದ ಆರೋಪಿ ಬಂಧನ

ಉಳ್ಳಾಲ : ಶಾಲೆಗೆ ತೆರಳುತ್ತಿದ್ದ ಒಂಬತ್ತನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರಿನಲ್ಲಿ ಅಪಹರಿಸಿದ ಆರೋಪದ ಮೇಲೆ ಬಾಗಲಕೋಟೆ ಮೂಲದ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ, ಉಳ್ಳಾಲ ಭಾಗದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಗೂಡಸಾಬ್ ಅಲಿಯಾಸ್ ಆಶಿಫ್ (23) ಎಂದು ಗುರುತಿಸಲಾಗಿದೆ.

ಉಳ್ಳಾಲ ತಾಲೂಕು ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಗಲಕೋಟೆ ಮೂಲದ ಕುಟುಂಬವೊಂದರ ಇಬ್ಬರು ಅಪ್ರಾಪ್ತ ಸಹೋದರಿಯರು ಸ್ಥಳೀಯ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ ಪೋಷಕರು ಎಂದಿನಂತೆ ಇಬ್ಬರು ಮಕ್ಕಳನ್ನು ಶಾಲಾ ವಾಹನದಲ್ಲಿ ಕಳುಹಿಸಿದ್ದರು. ಆದರೆ, ಹಿರಿಯ ಮಗಳು ಶಾಲೆಗೆ ಬಂದಿಲ್ಲವೆಂದು ಶಿಕ್ಷಕರು ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ನಾಪತ್ತೆಯಾದ ಬಾಲಕಿ, ಆರೋಪಿ ಶಾಲೆಯ ಬಳಿ ತನ್ನನ್ನು ಹಿಂಬಾಲಿಸಿ ಮಾತನಾಡಿಸುತ್ತಿದ್ದ ವಿಚಾರವನ್ನು ಈ ಹಿಂದೆಯೇ ತಾಯಿಗೆ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ತಾಯಿ ಆರೋಪಿಯನ್ನು ಭೇಟಿಯಾಗಿ, ತಮ್ಮ ಕುಟುಂಬ ಪರಿಶಿಷ್ಟ ಜಾತಿಗೆ ಸೇರಿದ್ದು, ತನ್ನ ಮಗಳು ಅಪ್ರಾಪ್ತೆಯಾಗಿರುವುದರಿಂದ ಆಕೆಯ ವಿಚಾರಕ್ಕೆ ಬರಬಾರದೆಂದು ಎಚ್ಚರಿಕೆ ನೀಡಿದ್ದರು ಎಂದು ತಿಳಿದುಬಂದಿದೆ.

ಆದರೂ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿದ್ದಾನೆ ಎಂದು ಆರೋಪಿಸಿ, ಮಗಳನ್ನು ಪತ್ತೆಹಚ್ಚಿ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಯಿ ಮಂಗಳವಾರ ಸಂಜೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 137(2) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಕಲಂ 3(2)(V) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು.

ಪ್ರಕರಣದ ಬೆನ್ನುಹತ್ತಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿಯೇ ಸೋಮೇಶ್ವರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.

Post a Comment

Previous Post Next Post