ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಹೃದಯ ಸ್ತಂಭನದಿಂದ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಗೋವಾದಲ್ಲಿರುವ ತಮ್ಮ ನಿವಾಸದಲ್ಲಿದ್ದ ವೇಳೆ ಬೆಳಗ್ಗೆ ಸುಮಾರು 5.20ಕ್ಕೆ ಅವರಿಗೆ ತೀವ್ರ ಹೃದಯ ಸ್ತಂಭನ ಉಂಟಾಗಿದೆ ಎಂದು ತಿಳಿದುಬಂದಿದೆ.
ತಕ್ಷಣ ವೈದ್ಯಕೀಯ ನೆರವು ಒದಗಿಸಲಾಗಿದ್ದು, ವೈದ್ಯರು ಸುಮಾರು 45 ನಿಮಿಷಗಳ ಕಾಲ ನಿರಂತರವಾಗಿ ಸಿಪಿಆರ್ (CPR) ನಡೆಸಿದರೂ ಯಾವುದೇ ಸ್ಪಂದನೆ ದೊರೆಯದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಾಲ್ಕರ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆ ವತಿಯಿಂದ ವೈದ್ಯಕೀಯ-ಕಾನೂನು ಪ್ರಕರಣ (MLC) ದಾಖಲಿಸಲಾಗಿದೆ. ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ನಾನಾ ಪಾಟೇಕರ್, ತಮ್ಮ ವಿಶಿಷ್ಟ ಸಂಭಾಷಣೆ ಶೈಲಿ, ಖಡಕ್ ಡೈಲಾಗ್ ಡೆಲಿವರಿ ಹಾಗೂ ತೀವ್ರತೆಯುಳ್ಳ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ‘ಪರಿಂಧಾ’, ‘ಕ್ರಾಂತಿವೀರ್’, ‘ಅಗ್ನಿಸಾಕ್ಷಿ’, ‘ತಿರಂಗಾ’, ‘ವೆಲ್ಕಮ್’, ‘ನಟಸಾಮ್ರಾಟ್’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ಅವರು ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದರು.
‘ಪರಿಂಧಾ’, ‘ಕ್ರಾಂತಿವೀರ್’ ಮತ್ತು ‘ಅಗ್ನಿಸಾಕ್ಷಿ’ ಚಿತ್ರಗಳಲ್ಲಿನ ಅಭಿನಯಕ್ಕಾಗಿ ನಾನಾ ಪಾಟೇಕರ್ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದರು. ಚಿತ್ರರಂಗದ ಜೊತೆಗೆ ಮರಾಠಿ ರಂಗಭೂಮಿಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು.
ನಾನಾ ಪಾಟೇಕರ್ ಅವರು ಕನ್ನಡ ಚಿತ್ರರಂಗದಲ್ಲೂ ಅಭಿನಯಿಸಿದ್ದರು. 2010ರಲ್ಲಿ ಬಿಡುಗಡೆಯಾದ ‘ಯಕ್ಷ’ ಅವರ ಕನ್ನಡದ ಏಕೈಕ ಚಿತ್ರವಾಗಿದ್ದು, ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಯೋಗರಾಜ್ ಪುಲಕೇಶ್ ಎಂಬ ಖಡಕ್ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿ, ಡಿಸಿಪಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ನಟ ಮಕರಂದ್ ಅನಾಸ್ಪುರೆ ಅವರೊಂದಿಗೆ ‘ನಾಮ್ ಫೌಂಡೇಶನ್’ ಸ್ಥಾಪಿಸಿದ್ದ ನಾನಾ ಪಾಟೇಕರ್, ವಿಶೇಷವಾಗಿ ಮಹಾರಾಷ್ಟ್ರದ ಬರಪೀಡಿತ ರೈತರು ಹಾಗೂ ಅವರ ಕುಟುಂಬಗಳಿಗೆ ನೆರವು ನೀಡುವ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದರು.
ನಟನೆಯ ಜೊತೆಗೆ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದ ಅವರು ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಚಿತ್ರವನ್ನು ನಿರ್ದೇಶಿಸಿದ್ದರು.
ನಾನಾ ಪಾಟೇಕರ್ ಅವರ ಹಠಾತ್ ನಿಧನದ ಸುದ್ದಿ ಚಿತ್ರರಂಗಕ್ಕೆ ಆಘಾತ ಉಂಟುಮಾಡಿದ್ದು, ಗಣ್ಯರು, ಸಹನಟರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
Post a Comment