ಮಂಗಳೂರು ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಾಹನಗಳಿಗೆ ಪ್ರವೇಶ ಶುಲ್ಕ: ಟ್ಯಾಕ್ಸಿ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಸಾಧ್ಯತೆ ; ಮೂಲಸೌಕರ್ಯ ನಿರ್ವಹಣೆಗೆ ಶುಲ್ಕ ವಿಧಿಸಿರುವುದಾಗಿ ವಿಮಾನ ನಿಲ್ದಾಣ ಆಡಳಿತ ಸ್ಪಷ್ಟನೆ !


ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಾಹನಗಳಿಗೆ ಇದೇ ಮೊದಲ ಬಾರಿಗೆ ವಿಮಾನ ನಿಲ್ದಾಣ ಪ್ರವೇಶ ಶುಲ್ಕ (Airport Access Charge) ಜಾರಿಗೆ ತರಲಾಗಿದೆ. ಈ ಶುಲ್ಕವನ್ನು ಟ್ಯಾಕ್ಸಿ ಚಾಲಕರು ಪ್ರಯಾಣಿಕರಿಂದ ವಸೂಲಿ ಮಾಡುವ ಸಾಧ್ಯತೆಯಿದ್ದು, ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಪ್ರಯಾಣ ವೆಚ್ಚ ಹೆಚ್ಚಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್‌ನ ಪತ್ರಿಕಾಗೋಷ್ಠಿಗೆ ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಾಣಿಜ್ಯ ವಾಹನಗಳಿಗೆ ಪ್ರವೇಶ ಶುಲ್ಕ ವಿಧಿಸುವುದು ಸಾಮಾನ್ಯ ಪದ್ಧತಿಯಾಗಿದೆ ಎಂದು ತಿಳಿಸಿದೆ.

ವಿಮಾನ ನಿಲ್ದಾಣದ ಭೂಭಾಗದ ಮೂಲಸೌಕರ್ಯಗಳ ಅಭಿವೃದ್ಧಿ, ನಿರ್ವಹಣೆ, ಭದ್ರತೆ ಹಾಗೂ ಹೆಚ್ಚುತ್ತಿರುವ ವಾಹನ ಸಂಚಾರವನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಈ ಶುಲ್ಕವನ್ನು ಜಾರಿಗೆ ತರಲಾಗಿದೆ. ದೇಶದ ಇತರ ಕೆಲವು ವಿಮಾನ ನಿಲ್ದಾಣಗಳಲ್ಲಿ ಜಾರಿಯಲ್ಲಿರುವ ಪದ್ಧತಿಗೆ ಅನುಗುಣವಾಗಿ ಪರಿಷ್ಕೃತ ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆ, ವಿದ್ಯುತ್ ಪೂರೈಕೆ, ಮೂಲಸೌಕರ್ಯಗಳ ನಿರ್ವಹಣೆ, ವಾಹನ ಸಂಚಾರ ನಿಯಂತ್ರಣಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಸೌಲಭ್ಯಗಳಿಗಾಗಿ ಗಣನೀಯ ವೆಚ್ಚವಾಗುತ್ತಿದೆ. ಅಲ್ಲದೆ, ಪ್ರಯಾಣಿಕರನ್ನು ವಿಮಾನ ನಿಲ್ದಾಣಕ್ಕೆ ಕರೆತರುವ ಅಥವಾ ಕರೆದೊಯ್ಯಲು ಬರುವ ಚಾಲಕರು ಹಾಗೂ ಇತರರಿಗೆ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದೆ.

ಈ ಸೌಲಭ್ಯಗಳ ನಿರ್ವಹಣೆ ಮತ್ತು ಪ್ರಯಾಣಿಕರಿಗೆ ಉತ್ತಮ ಅನುಭವ ಕಲ್ಪಿಸುವ ಉದ್ದೇಶದಿಂದ ಪ್ರವೇಶ ಶುಲ್ಕ ವಿಧಿಸಲಾಗಿದೆ ಎಂಬುದು ವಿಮಾನ ನಿಲ್ದಾಣ ಆಡಳಿತದ ಸಮರ್ಥನೆಯಾಗಿದೆ.

ಆದರೆ, ಈ ಶುಲ್ಕವನ್ನು ಟ್ಯಾಕ್ಸಿ ಚಾಲಕರು ಪ್ರಯಾಣಿಕರಿಂದ ವಸೂಲಿ ಮಾಡಿದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳುವವರ ಪ್ರಯಾಣ ವೆಚ್ಚದ ಮೇಲೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆಯಿದೆ. ಶುಲ್ಕದ ನಿಖರ ಮೊತ್ತ ಹಾಗೂ ವಸೂಲಾತಿಯ ವಿಧಾನಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

Post a Comment

Previous Post Next Post