ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದ ಘಟನೆ ನಡೆದಿದೆ. ಪೈಲಟ್ ಅವರ ಸಮಯಪ್ರಜ್ಞೆಯಿಂದ ವಿಮಾನದಲ್ಲಿದ್ದ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ.
ಸಂಜೆ ಸುಮಾರು 6 ಗಂಟೆಯ ವೇಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಟೇಕ್ ಆಫ್ ಆಗಲು ರನ್ ವೇನಲ್ಲಿ ವೇಗವಾಗಿ ಚಲಿಸುತ್ತಿತ್ತು. ವಿಮಾನ ಮೇಲಕ್ಕೆ ಹಾರಲು ಕೆಲವೇ ಕ್ಷಣಗಳು ಬಾಕಿ ಇರುವಾಗ ಪೈಲಟ್ಗೆ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಪೈಲಟ್ ತುರ್ತು ಬ್ರೇಕ್ ಹಾಕಿ ವಿಮಾನವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣವು ಟೇಬಲ್ಟಾಪ್ ಮಾದರಿಯ ರನ್ ವೇ ಹೊಂದಿರುವುದರಿಂದ ವಿಮಾನವನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿತ್ತು. ಆದರೂ ಪೈಲಟ್ ಸಮಯಪ್ರಜ್ಞೆಯಿಂದ ವಿಮಾನದ ವೇಗವನ್ನು ನಿಯಂತ್ರಿಸಿದ್ದು, ರನ್ ವೇಯ ಕೊನೆಯ ಭಾಗದಲ್ಲಿ ವಿಮಾನ ನಿಂತಿದೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ದುರಂತವೊಂದು ತಪ್ಪಿದಂತಾಗಿದೆ.
ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಅವರನ್ನು ವಿಮಾನದಿಂದ ಕೆಳಗಿಳಿಸಲು ವ್ಯವಸ್ಥೆ ಮಾಡಲಾಯಿತು. ನಂತರ ಇಂಡಿಗೋ ಸಂಸ್ಥೆಯು ಪ್ರಯಾಣಿಕರಿಗಾಗಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದೆ.
ಟೇಕ್ ಆಫ್ ಹಂತದಲ್ಲೇ ಕಾಣಿಸಿಕೊಂಡ ತಾಂತ್ರಿಕ ದೋಷವನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ವಿಮಾನವನ್ನು ನಿಲ್ಲಿಸಿದ ಪೈಲಟ್ ಅವರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.
Post a Comment