
ಮಂಗಳೂರು: ನಗರದ ಅಶೋಕ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಶಾಖಾ ಗ್ರಂಥಾಲಯದ ಕಟ್ಟಡವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ನಗರ ಕೇಂದ್ರ ಗ್ರಂಥಾಲಯದ ಸದಸ್ಯ ಸುಬ್ರಹ್ಮಣ್ಯ ಶೆಣೈ ಅವರ ನಿರಂತರ ಪ್ರಯತ್ನದ ಫಲವಾಗಿ ಗ್ರಂಥಾಲಯಕ್ಕೆ ನೂತನ ಕಟ್ಟಡ ನಿರ್ಮಾಣಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ.ವೇದವ್ಯಾಸ ಕಾಮತ್, ಗ್ರಂಥಾಲಯ ಆರಂಭದ ದಿನಗಳಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ಓದುಗರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಸೂಕ್ತ ಸ್ಥಳಾವಕಾಶ ಕಲ್ಪಿಸಲು ಸತತ ಪ್ರಯತ್ನ ನಡೆಸಲಾಗಿದ್ದು, 2019ರಲ್ಲಿ ಆರಂಭಿಸಿದ ಪ್ರಯತ್ನಕ್ಕೆ ಇದೀಗ ಫಲ ದೊರೆತಿದೆ ಎಂದರು.
ಗ್ರಂಥಾಲಯದ ಕಟ್ಟಡ ನಿರ್ಮಾಣಕ್ಕೆ ತಮ್ಮ ಸ್ವಂತ ನಿಧಿಯಿಂದ 15 ಲಕ್ಷ ರೂ. ಅನುದಾನ ನೀಡಲಾಗಿದ್ದು, ನಗರ ಗ್ರಂಥಾಲಯ ಪ್ರಾಧಿಕಾರದ ನಿಧಿಯಿಂದ 16 ಲಕ್ಷ ರೂ. ನೆರವು ಪಡೆದು ಮತ್ತೊಂದು ಕೊಠಡಿಯನ್ನು ನಿರ್ಮಿಸಲಾಗಿದೆ. ನೂತನ ಕಟ್ಟಡ ಉದ್ಘಾಟನೆಯಾಗಿರುವುದು ಓದುಗರ ಪಾಲಿಗೆ ಸಂತಸದ ವಿಚಾರವಾಗಿದೆ. ಈ ಹಿಂದೆ ಸಣ್ಣ ಕೊಠಡಿಯಲ್ಲೇ ಪ್ರತಿನಿತ್ಯ ಅನೇಕರು ಜ್ಞಾನಾರ್ಜನೆ ಮಾಡುತ್ತಿದ್ದರು. ಇದೀಗ ನೂತನ ಕಟ್ಟಡದಿಂದ ಓದುಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕಟ್ಟಡದ ಮೇಲ್ಭಾಗದಲ್ಲಿ ಮತ್ತೊಂದು ಕೊಠಡಿ ನಿರ್ಮಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ಅಧ್ಯಯನ ಕೇಂದ್ರ ಸ್ಥಾಪಿಸುವ ಉದ್ದೇಶವಿದೆ. ಈ ಕಾರ್ಯಕ್ಕೂ ಅಗತ್ಯ ಸಹಕಾರ ಮತ್ತು ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಟ್ ಪಿಂಟೊ, ಜಯಲಕ್ಷ್ಮೀ, ಗಣೇಶ್ ಕುಲಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು
Post a Comment