ಮಂಗಳೂರು: ಸುರತ್ಕಲ್‌ನ ಬಾಳದಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಬಾಟ್ಲಿಂಗ್ ಘಟಕದ ಎದುರು ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ನಾಲ್ವರು ಮಹಿಳಾ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 75 ದಿನಗಳನ್ನು ಪೂರೈಸಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದದ ಶರಣವ್ವ ಭಜಂತ್ರಿ, ಸೂರವ್ವ ಕೊಲ್ಲದ್, ಪಾರವ್ವ ಗಾಣಿಗೇರ ಹಾಗೂ ಸುವರ್ಣ ಪಾಟೀಲ ಅವರು ತಮಗೆ ಅನ್ಯಾಯವಾಗಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ನ್ಯಾಯಕ್ಕಾಗಿ ಧರಣಿ ನಡೆಸುತ್ತಿದ್ದಾರೆ.
ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮಹಿಳಾ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ನೇಮಿಸುವಂತೆ ಸೂಚಿಸಿದ್ದರೂ, HPCL ಅಧಿಕಾರಿಗಳು ಈವರೆಗೆ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕ ಹೋರಾಟ ಸಮಿತಿ ಆರೋಪಿಸಿದೆ.
ಈ ನಡುವೆ, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು ನವೆಂಬರ್ 20ರಂದು ವಿಚಾರಣೆಗೆ ಹಾಜರಾಗುವಂತೆ ಕಂಪನಿಯ ಹಿರಿಯ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ನವೆಂಬರ್ 20ರ ವಿಚಾರಣೆಯಲ್ಲಿ ನ್ಯಾಯ ದೊರೆಯದಿದ್ದರೆ ಹಾಗೂ ಕಂಪನಿಯ ಅಧಿಕಾರಿಗಳು ಸಮಸ್ಯೆಯನ್ನು ಇತ್ಯರ್ಥಪಡಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ನಾಗರಿಕ ಹೋರಾಟ ಸಮಿತಿ ಹಾಗೂ ಸಿಐಟಿಯು ಎಚ್ಚರಿಕೆ ನೀಡಿವೆ.
ನ್ಯಾಯಕ್ಕಾಗಿ ಸುದೀರ್ಘ ಹೋರಾಟ ನಡೆಸುತ್ತಿರುವ ಮಹಿಳಾ ಕಾರ್ಮಿಕರಿಗೆ ಸಾರ್ವಜನಿಕರು ಬೆಂಬಲ ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.
Post a Comment