ಬೆಂಗಳೂರು: ಬೆಂಗಳೂರಿನ ಮೆಟ್ರೋ ಸಂಚಾರ ವ್ಯವಸ್ಥೆಗೆ ಮಹತ್ವದ ಸೇರ್ಪಡೆಯಾಗಿ ಪಿಂಕ್ ಮಾರ್ಗದ ರೈಲು ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ರೈಲಿಗೆ ಹಸಿರು ನಿಶಾನೆ ತೋರಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರು ಮೆಟ್ರೋ ನಿಲ್ದಾಣದಲ್ಲಿರುವ ಪಿಂಕ್ ಲೈನ್‌ನ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಯವರಿಗೆ ಮಾರ್ಗದ ವಿವರಗಳನ್ನು ನೀಡಿದರು. ಮಾರ್ಗದ ಸಂಪರ್ಕ ವ್ಯವಸ್ಥೆ, ವಿವಿಧ ಪ್ರದೇಶಗಳಿಗೆ ದೊರೆಯುವ ಸಂಪರ್ಕ ಸೌಲಭ್ಯಗಳ ಕುರಿತು ಮಾಹಿತಿ ಹಂಚಿಕೊಂಡರು.
ಇದೇ ವೇಳೆ ಬೆಂಗಳೂರಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಡಬಲ್ ಡೆಕ್ಕರ್ ಮಾದರಿಯ ಸಾರಿಗೆ ವ್ಯವಸ್ಥೆಯಿಂದ ಆಗುವ ಅನುಕೂಲಗಳ ಬಗ್ಗೆಯೂ ಮುಖ್ಯಮಂತ್ರಿ ವಿವರಿಸಿದರು. ನಗರದ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸುವುದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವುದು ಹಾಗೂ ಸುಗಮ ಸಂಚಾರಕ್ಕೆ ಈ ಯೋಜನೆ ಹೇಗೆ ನೆರವಾಗಲಿದೆ ಎಂಬುದನ್ನು ಪ್ರಧಾನಮಂತ್ರಿಯವರ ಗಮನಕ್ಕೆ ತಂದರು.
ಪಿಂಕ್ ಮಾರ್ಗದ ರೈಲು ಸಂಚಾರ ಆರಂಭವು ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ.
Post a Comment